".

Header Ads

₹209.80 ಕೋಟಿ ವೆಚ್ಚದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

 

 


ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಉಲ್ಲಾಳು ಗ್ರಾಮದಲ್ಲಿ ಕೋವಿಡ್ ಸಂಕಷ್ಟದ ಸಮಯದಲ್ಲಿ ನೀಡಿದ ಭರವಸೆಯಂತೆ  209.80 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

  100 ಕೋಟಿ ರೂ. ವೆಚ್ಚದಲ್ಲಿ ನೆಲಮಹಡಿ ಒಳಗೊಂಡಂತೆ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು ಎರಡನೇ ಹಂತದಲ್ಲಿ 4 ಮತ್ತು 5ನೇ ಮಹಡಿ, ವಸತಿ ಗೃಹಗಳು, ಮೂಲಭೂತ ಸೌಕರ್ಯ ಕಾಮಗಾರಿಗಳು, ವೈದ್ಯಕೀಯ ಉಪಕರಣಗಳು ಹಾಗೂ ಪೀಠೋಪಕರಣಗಳು ಒಳಗೊಂಡಿರುತ್ತದೆ.

ಬಿಡಿಎ ಅಭಿವೃದ್ಧಿಪಡಿಸಿರುವ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆ 3ನೇ ಬ್ಲಾಕ್ 80 ಅಡಿ ರಸ್ತೆಯ ಉಲ್ಲಾಳು ಮುಖ್ಯರಸ್ತೆಯಲ್ಲಿರುವ ಸಿಎ-1 (ಸರ್ವೆ ನಂ.150/1ರಲ್ಲಿ)10,525 ಚದರ ಅಡಿಗಳ ಜಾಗವನ್ನು ಸರ್ಕಾರಿ ಆಸ್ಪತ್ರೆಗೆ ಮೀಸಲಿರಿಸಲಾಗಿದೆ. ಈ ಜಾಗದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು ಇದಕ್ಕಾಗಿ ಬಿಡಿಎಗೆ 8.50 ಕೋಟಿ ರೂ. ಹಣವನ್ನು ಕೂಡ ಆಸ್ಪತ್ರೆ ನಿರ್ಮಾಣದ ಮೊದಲ ಹಂತದಲ್ಲಿ ಪಾವತಿಸಲು ಉದ್ದೇಶಿಸಲಾಗಿದೆ.

ಉಲ್ಲಾಳು ಗ್ರಾಮದಲ್ಲಿ 250 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗುವುದರಿಂದ ಬೆಂಗಳೂರು ನಗರದ ಪಶ್ಚಿಮ ಭಾಗದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರವು ಬೆಂಗಳೂರಿನ ಪಶ್ಚಿಮ ಭಾಗದಲ್ಲಿದೆ. ಈ ಭಾಗದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆ ಇಲ್ಲದೆ ವಿಕ್ಟೋರಿಯಾ ಅಥವಾ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಂತೂ ಜನತೆ ಚಿಕಿತ್ಸೆಗಾಗಿ ಪರದಾಡುವುದನ್ನು ಕಂಡು ಈ ಭಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಮೂಲಕ ಆರೋಗ್ಯ ಸೇವೆ ಒದಗಿಸುವುದಾಗಿ ಜನತೆಗೆ ಭರವಸೆ ನೀಡಲಾಗಿತ್ತು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರಿಗೆ ಅನಂತ ಧನ್ಯವಾದಗಳು. ಆದಷ್ಟು ಶೀಘ್ರದಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವಲ್ಲಿ ಶ್ರಮಿಸಲಾಗುವುದು ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.


Powered by Blogger.