ಕಾಂಗ್ರೆಸ್ ಅಲ್ಲೋಲ ಕಲ್ಲೋಲ ,ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ನೋಟಿಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ನೋಟಿಸ್ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿರುವ ಅರ್ಜಿಯಲ್ಲಿ ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 27ರಂದೇ ನೋಟಿಸ್ ಕಳುಹಿಸಲಾಗಿದೆ.
ಇಂದು ನಡೆಯಲಿರುವ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೋಟಿಸ್‌ಗೆ ವಿವರಣೆ ನೀಡುವ ಬಗ್ಗೆ ಹಾಗೂ ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ನೋಟಿಸ್‌ಗೆ ಸಂಬಂಧಿಸಿದ ವಿಚಾರ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಹೊರಗುಳಿದಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ, ಈ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನ ಹೊರಬೀಳಲಿದೆ.
ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ₹55.80 ಕೋಟಿ ನಷ್ಟವಾಗಿದೆ. ಈ ಬಗ್ಗೆ ತನಿಖೆಗಾಗಿ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ 7, 9, 11, 12 ಮತ್ತು 13ನೇ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಅಬ್ರಹಾಂ ತಿಳಿಸಿದ್ದಾರೆ.
Post a Comment