".

Header Ads

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

  ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ಮೇ 19 ರಂದು ಸಂಜೆ ನಡೆದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿಯಾದ, ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಪೂರ್ಣ (21) ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಮೇ 19 ರಂದು ಸಂಜೆ 4 ಗಂಟೆಯ ಸುಮಾರಿಗೆ ಒಟ್ಟು ಏಳು ಮಂದಿ ವಿದ್ಯಾರ್ಥಿಗಳ ತಂಡ ಪಜಿರಡ್ಕದ ನೇತ್ರಾವತಿ ನದಿಗೆ ಈಜಲು ತೆರಳಿತ್ತು. ಈ ವೇಳೆ ಈಜಾಡುತ್ತಿದ್ದಾಗ ಶ್ರೀಪೂರ್ಣ ಅವರು ಆಕಸ್ಮಿಕವಾಗಿ ನೀರಿನ ಆಳಕ್ಕೆ ಸಿಲುಕಿ ಮುಳುಗಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಸಹಪಾಠಿಗಳು ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಯುವಕನ ಮೃತದೇಹದ ಪತ್ತೆಗಾಗಿ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಧರ್ಮಸ್ಥಳದ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಜಂಟಿಯಾಗಿ ತೀವ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ನದಿಯ ಆಳದಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.


Powered by Blogger.