ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ: ಆರು ವಿದ್ಯಾರ್ಥಿಗಳ ವಶ, ಪ್ರಥಮ ವರ್ಷದ ವಿದ್ಯಾರ್ಥಿಗೆ ಕುತ್ತಿಗೆ ಮೂಳೆ ಮುರಿತ
ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಶಂಕೆಯ ಹಿನ್ನೆಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ನಡೆದಿದ್ದೆಂದು ಆರೋಪಿಸಲಾದ ಹಲ್ಲೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪೊಲೀಸರು ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜುಹಾರಕೆರೆಯ ಸಮೀಪ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ ಹಾಗೂ ಜೆ. ಖಾದರ್ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತರ ಹೇಳಿಕೆಯ ಪ್ರಕಾರ, ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರವಾಗಿ ಹಿರಿಯ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮಾತಿನ ಚಕಮಕಿ ಬಳಿಕ ಅದು ಹಲ್ಲೆಗೆ ತಿರುಗಿದೆ. ಈ ವೇಳೆ ಇಬ್ಬರ ಮೇಲೂ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಕುತ್ತಿಗೆ ಮೂಳೆ ಮುರಿತ ಆಗಿರುವುದಾಗಿ ತಿಳಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುವಿನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ರ‍್ಯಾಗಿಂಗ್ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಸಂಬಂಧ ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ಪ್ರಾಥಮಿಕ ಮಾಹಿತಿ ಪ್ರಕಾರ ಇದು ರ‍್ಯಾಗಿಂಗ್ ಪ್ರಕರಣದಂತೆ ಕಾಣುತ್ತಿದೆ ಎಂದು ಹೇಳಿದರು.
“ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಸಮಗ್ರ ತನಿಖೆ ಕೈಗೊಳ್ಳಲಾಗುತ್ತದೆ. ಘಟನೆ ಹೇಗೆ ನಡೆದಿದೆ ಮತ್ತು ಆರೋಪಿಗಳ ಪಾತ್ರ ಏನು ಎಂಬುದನ್ನು ತನಿಖೆಯಿಂದ ಸ್ಪಷ್ಟಪಡಿಸಲಾಗುತ್ತದೆ,” ಎಂದು ಅವರು ತಿಳಿಸಿದರು.
ತನಿಖೆಯ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಅಧಿಕೃತ ದಾಖಲೆಗಳ ಪ್ರಕಾರ, 2022ರಿಂದ 2026ರ ಜುಲೈ 22ರವರೆಗೆ ಕರ್ನಾಟಕದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 181 ರ‍್ಯಾಗಿಂಗ್ ದೂರುಗಳು ದಾಖಲಾಗಿದ್ದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಇದೇ ಅತಿ ಹೆಚ್ಚು ಎನ್ನಲಾಗಿದೆ. ರ‍್ಯಾಗಿಂಗ್ ತಡೆ ಸಮಿತಿಗಳು ಹಾಗೂ ಕಠಿಣ ನಿಯಮಗಳಿದ್ದರೂ ಇಂತಹ ಪ್ರಕರಣಗಳು ಮುಂದುವರಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ವರ್ಷದ ಜನವರಿಯಲ್ಲಿಯೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದ್ದ ರ‍್ಯಾಗಿಂಗ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 22ರಿಂದ 23 ಹಿರಿಯ ವಿದ್ಯಾರ್ಥಿಗಳು ಹಾಗೂ ಹೊರಗಿನ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
Post a Comment